ವಾರದೊಳಗೆ ಕನ್ಸೆಂಟ್ ಅವಾರ್ಡ ನಿಗದಿ: ಸಿಎಂ

ಆಲಮಟ್ಟಿ (ಬಾಗಲಕೋಟೆ): ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಒಪ್ಪಿತ ದರ ನಿಗದಿ ಬಳಿಕ ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ಯೋಜನಾನುಷ್ಠಾನ ವಿಳಂಬವಾಗುತ್ತದೆ ಎಂದು ಅವರು ಹೇಳಿದರು.

ನೀರು ಬಳಕೆಗೆ ಅನುಕೂಲ:

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. . ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದರು.

ಕೇಂದ್ರದ ಜತೆ ಚರ್ಚೆ:

ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಸಚಿವರಾದ ಆರ್.ಬಿ.‌ತಿಮ್ಮಾಪುರ, ಎಂ.ಬಿ.‌ಪಾಟೀಲ, ಶಿವಾನಂದ ಪಾಟೀಲ, ಶಾಸಕರಾದ. ಎಚ್.ವೈ. ಮೇಟಿ, ಭೀಮಸೇನ ಚಿಮ್ಮನಕಟ್ಟಿ, ವಿಜಯಾನಂದ ಕಾಶಪ್ಪನವರ, ಜೆ.ಟಿ.‌ಪಾಟೀಲ,‌ರಾಜು ಗೌಡ, ಯಶವಂತರಾಯಗೌಡ ಪಾಟೀಲ, ಅಶೋಕ ಮನಗೂಳಿ, ಅಪ್ಪಾಜಿ ನಾಡಗೌಡ, ವಿಠ್ಠಲ ಕಟಕಧೊಂಡ ಇತರರು ಇದ್ದರು.

Scroll to Top