ಬಾಗಲಕೋಟೆ: ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ವಿರೋಧಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ರಮೇಶ ಕತ್ತಿಯವರ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಅಕ್ಟೋಬರ್ 19ರಂದು ಬೆಳಗಾವಿಯ ಬಿ.ಕೆ. ಮಾಡಲ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಡಿಸಿಸಿ ಬ್ಯಾಂಕಿನ ಚುನಾವಣೆ ಮತದಾನ ಪ್ರಕ್ರಿಯೆಯ ವೇಳೆ ರಮೇಶ ಕತ್ತಿ ತಮ್ಮ ಬೆಂಬಲಿಗರೊಂದಿಗೆ ಮಾತನಾಡುವಾಗ ಸಾರ್ವಜನಿಕವಾಗಿ ವಾಲ್ಮೀಕಿ, ಬೇಡ, ನಾಯಕ ಜನಾಂಗದವರ ವಿರುದ್ಧ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ರಾಜ್ಯಾದ್ಯಂತ ಸುಮಾರು 75 ಲಕ್ಷ ವಾಲ್ಮೀಕಿ ಸಮುದಾಯದ ಜನರ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಕತ್ತಿಯವರು ಸತತವಾಗಿ ಎಸ್‌ಸಿ/ಎಸ್‌ಟಿ ಸಮುದಾಯಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಈ ಮೂಲಕ ಡಾ. ಬಾಬಾಸಾಹೇಬ ಅಂಬೇಡ್ಕರವರ ಸಂವಿಧಾನಕ್ಕೂ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಶಾಸಕ ಜೆ.ಟಿ. ಪಾಟೀಲ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕತ್ತಿ ಹೇಳಿಕೆ ಖಂಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ವಾಲ್ಮೀಕಿ ಸಮಾಜದ ಸದಸ್ಯರು ಭಾಗವಹಿಸಿ, ರಮೇಶ ಕತ್ತಿಯವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.




